ಪ್ರಶಾಂತ್ ಎನ್ ಮಲ್ಲಿಕ್
ಮೈಸೂರು: ರಾಜ್ಯ ಸರ್ಕಾರ ಇಲ್ಲಿಯವರೆಗೂ ಒಂದೂ ಜನಪರ ಕೆಲಸ ಮಾಡಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಜನಾಕ್ರೋಶ ಯಾತ್ರೆ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಮೇಕೆದಾಟು ಸೇರಿದಂತೆ ಹಲವು ಹೋರಾಟ ಮಾಡಿತ್ತು. ಅಧಿಕಾರಕ್ಕೆ ಬಂದ ಬಳಿಕ ಎಲ್ಲವನ್ನು ಮರೆತುಬಿಟ್ಟಿದೆ. ಸರ್ಕಾರ ಇಲ್ಲಿಯವರೆಗೂ ಒಂದು ಜನಪರ ಕೆಲಸ ಮಾಡಲಿಲ್ಲ. ಎಷ್ಟು ವರ್ಷ ಅಧಿಕಾರ ನಡೆಸಿದರು ಎನ್ನುವುದು ಮುಖ್ಯವಲ್ಲ, ಬದಲಿಗೆ ಜನರಿಗೆ ಏನೇನು ಕೊಡುಗೆ ನೀಡಿದ್ದಾರೆ ಎಂಬುದು ಮುಖ್ಯ ಎಂದರು.
ಇನ್ನು ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡಿ ಮೈಸೂರು ಜಿಲ್ಲೆಯನ್ನು ಅಭಿವೃದ್ಧಿಪಡಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬದುಕಿದ್ದು ಸತ್ತಂತೆ ಆಗಿದೆ. ಹಾಲು, ಪೆಟ್ರೊಲ್, ಡೀಸೆಲ್ ಬೆಲೆಯನ್ನು ನಿರಂತರ ಏರಿಕೆ ಮಾಡಲಾಗುತ್ತಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಲೇ ಇದೆ. ಪರಿಣಾಮ ಜನಸಾಮಾನ್ಯರು ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳು ಬಸ್‌ಗಳ ಸಮಸ್ಯೆ ಎದುರಿಸುವ ಪರಿಸ್ಥಿತಿ ಬಂದಿದೆ. ರಾಜ್ಯ ಸರ್ಕಾರಕ್ಕೆ ಜನಪರ ಕಾಳಜಿ ಇಲ್ಲವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.