Mysore
20
overcast clouds
Light
Dark

ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ: 20 ಸಾವಿರ ಜನ ಸೇರುವ ನಿರೀಕ್ಷೆ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಾಳೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ನಾಳೆ ಮೈಸೂರು ಬಂದ್‌ ನಿರ್ಧಾರವನ್ನು ಕೈಬಿಟ್ಟಿದ್ದು, 20 ಸಾವಿರಕ್ಕೂ ಹೆಚ್ಚು ಜನರಿಂದ ಬೃಹತ್‌ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುತ್ತದೆ.

ಮೈಸೂರು ನಗರ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಸಮಾಲೋಚನೆ ನಡೆಸಿದ ಬಳಿಕವೇ ಕಾಂಗ್ರೆಸ್‌ ನಾಯಕರು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರವನ್ನು ಸಲ್ಲಿಸಲು ತೀರ್ಮಾನ ಮಾಡಲಾಗಿದೆ.

ನಾಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಪ್ರತಿಭಟನೆ ನಡೆಯಲಿದೆ. ಈ ಬಗ್ಗೆ ಶಾಸಕ ಹರೀಶ್‌ ಗೌಡ ಮಾಹಿತಿ ನೀಡಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ. ಸರ್ಕಾರ ನಡೆಸುತ್ತಿರುವ ನಾಯಕರೇ ಕಾಂಗ್ರೆಸ್‌ ಪಕ್ಷದವರಾಗಿರುವ ಕಾರಣ ಶಿಸ್ತಿನಿಂದ ಪ್ರತಿಭಟನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನಾಳೆ ನಡೆಯುವ ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನ ಎಲ್ಲಾ ನಾಯಕರು ಹಾಗೂ ಈ ಭಾಗದ ಶಾಸಕರು ಭಾಗಿಯಾಗಲಿದ್ದು, ಸಿಎಂ ಸಿದ್ದರಾಮಯ್ಯ ಪರ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ.