ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಜಂಬೂಸವಾರಿಯ ಗಜಪಡೆಗಳಿಗೆ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಕೆ ಮಾಡಿ ಅರಮನೆ ಅವರಣಕ್ಕೆ ಬರ ಮಾಡಿಕೊಳ್ಳಲಾಯಿತು.
ಮೈಸೂರಿನ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಇಂದು ಸಂಜೆ 6:45ರ ಗೊಧೋಳಿ ಲಗ್ನದಲ್ಲಿ ಚಿನ್ನದ ಅಂಬಾರಿ ಹೊರುವ ಅಭಿಮನ್ಯು ಹಾಗೂ ಅದರೊಂದಿಗೆ ಭೀಮ, ಕಂಜನ್, ಧನಂಜಯ, ಪ್ರಶಾಂತ, ಮಹೇಂದ್ರ, ಏಕಲವ್ಯ, ಕಾವೇರಿ ಹಾಗೂ ಲಕ್ಷ್ಮೀ ಆನೆಗಳಿಗೆ ಮೈಸೂರು ಜಿಲ್ಲಾಡಳಿತದ ವತಿಯಿಂದ ಪುಷ್ಪಾರ್ಚನೆ ಮಾಡುವ ಮುಖಾಂತರ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.
ಎಂದಿನಂತೆ ಪೊಲೀಸ್ ವಂದನೆ ಸ್ವೀಕರಿಸಿ ಮೊದಲ ತಂಡದ ಎಲ್ಲಾ ಆನೆಗಳು ಅರಮನೆ ಪ್ರವೇಶಿಸಿದವು. ನಾಡಿನ ಕಲೆ ಹಾಗೂ ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ತಂಡಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದವು. ಸಾರ್ವಜನಿಕರು ಕೂಡ ಕಾರ್ಯಕ್ರಮವನ್ನು ವೀಕ್ಷಿಸಿ ಖುಷಿಪಟ್ಟರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.





