ತೋಟದ ಮನೆಯಲ್ಲಿ ಚನ್ನಪಟ್ಟಣ ಕಾರ್ಯಕರ್ತರು, ಮುಖಂಡರ ಸಭೆ ನಡೆಸಿದ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಗೆ ಜೆಡಿಎಸ್ ತಯಾರಿ, ಅಭ್ಯರ್ಥಿ ಆಯ್ಕೆ ಬಗ್ಗೆ ಸಮಾಲೋಚನೆ
ಮಿತ್ರಪಕ್ಷ ಬಿಜೆಪಿ ಜತೆ ಚರ್ಚಿಸಿ ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಮಾಡುತ್ತೇವೆ ಎಂದ ಎಚ್‌ಡಿಕೆ
ರಾಮನಗರ: ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಎಚ್ .ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ ತಮ್ಮ ತೋಟದಲ್ಲಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರ ಸಭೆ ಕರೆದು ಸಮಾಲೋಚನೆ ನಡೆಸಿದರು.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು ಸೇರಿದಂತೆ ಚನ್ನಪಟ್ಟಣ ಕ್ಷೇತ್ರದ ಎಲ್ಲಾ ಪ್ರಮುಖ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಈಗಾಗಲೇ 5 ಜಿಲ್ಲಾ ಪಂಚಾಯತಿ, ಕ್ಷೇತ್ರ ಹಾಗೂ ಪಟ್ಟಣ ಭಾಗದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ಹಳ್ಳಿ, ಹೋಬಳಿ, ಪಂಚಾಯಿತಿ ಮಟ್ಟದ ಮುಖಂಡರು ಬಂದಿದ್ದರು. ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು. ಅಭ್ಯರ್ಥಿ ಯಾರಾಗಬೇಕು ಎನ್ನುವುವ ಬಗ್ಗೆ ಸಮಾಲೋಚನೆ ನಡೆಸಿದ್ದೇನೆ. ಜೆಡಿಎಸ್- ಬಿಜೆಪಿ ಎರಡು ಪಕ್ಷಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಮಿತ್ರಪಕ್ಷ ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಕೆಲಸ ಮಾಡಬೇಕು ಎಂದು ಮುಖಂಡರಿಗೆ ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.
ನವೆಂಬರ್ ಒಳಗೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಅದೇ ಸಮಯದಲ್ಲಿ ಚನ್ನಪಟ್ಟಣ ಉಪ ಚುನಾವಣೆ ನಡೆಯಬಹುದು. ಇನ್ನು ಒಂದು ವಾರದಲ್ಲಿ ಚುನಾವಣೆ ಘೋಷಣೆಯಾಗಬಹುದು. ಅಂತಿಮವಾಗಿ ದೆಹಲಿ ಮಟ್ಟದಲ್ಲಿ ಬಿಜೆಪಿಯ ಹೈಕಮಾಂಡ್ ಹಾಗೂ ನಾವು ಕೂತು ಚರ್ಚೆ ಮಾಡುತ್ತೇವೆ ಎಂದು ಕೇಂದ್ರ ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.
ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಕಳೆದ ಎರಡು ಬಾರಿ ಜೆಡಿಎಸ್ ನಿಂದ ಗೆದ್ದಿದ್ದೇವೆ. ಈ ಹಿಂದಿನಿಂದಲೂ ಇದು ಜೆಡಿಎಸ್ ಭದ್ರಕೋಟೆ. ನಮ್ಮಲ್ಲಿನ ಸಂಘಟನೆಯಲ್ಲಿ ಕೆಲವೊಂದು ಲೋಪದೋಷಗಳಿಂದ ಹಿಂದೆ ಬಿದ್ದಿದ್ದೆವು.
2013ರಲ್ಲೂ ನಮಗೆ ಹೆಚ್ಚಿನ ಮತಗಳು ಬಂದಿದ್ದವು. ಚನ್ನಪಟ್ಟಣದಲ್ಲಿ ಕಾರ್ಯಕರ್ತರೇ ನನ್ನ ಚುನಾವಣೆ ನಡೆಸಿದ್ದಾರೆ. ನಮ್ಮ ಸಂಘಟನೆ ದೃಷ್ಟಿಯಿಂದ ಕೂತು ಚರ್ಚೆ ಮಾಡಿದ್ದೇವೆ. ಯಾವುದೇ ಸಮಸ್ಯೆ ಆಗದ ರೀತಿ ಚುನಾವಣೆ ನಡೆಸುತ್ತೇವೆ ಎಂದು ಸಚಿವರು ಹೇಳಿದರು.
ನಿಖಿಲ್ ಅಭ್ಯರ್ಥಿ ಆಗಬೇಕು ಎಂಬ ಒತ್ತಡ ಇದೆ
ನಿಖಿಲ್ ಕುಮಾರಸ್ವಾಮಿ ಅವರು ಉಪ ಚುನಾವಣೆಯ ಅಭ್ಯರ್ಥಿ ಆಗಬೇಕು ಎಂಬ ಬಗ್ಗೆ ಕಾರ್ಯಕರ್ತರಿಂದ ಒತ್ತಡ ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು; ಒತ್ತಡ, ಒತ್ತಾಯ ಇರುವುದು ನಿಜ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತ 95% ನಾಯಕರು, ಮುಖಂಡರ ಅಭಿಪ್ರಾಯವಿದೆ. ಆದರೆ, ನಾವು ಈಗ ಇರುವ ಸನ್ನಿವೇಶ ನೋಡಿಕೊಂಡು ನಿರ್ಧಾರ ಕೈಗೊಳ್ಳಬೇಕು. ಏನೇನು ಬೆಳವಣಿಗೆಗಳು ಇವೆ ಅಂತ ನೋಡಬೇಕು. ನಿಖಿಲ್ ಮಂಡ್ಯದಲ್ಲಿ ನಿಲ್ಲಿಸಿದಾಗ ಎಲ್ಲಾ ಪಕ್ಷಗಳು ಒಂದಾಗಿ ಸೋಲಿಸಿದರು. ಸಂಘಟಿತ ಷಡ್ಯಂತ್ರ ಮಾಡಿ ಸೋಲಿಸಲಾಯಿತು. ನಾನು ಈಗ ಎನ್ ಡಿಎ ಭಾಗ. ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕು. ಯಾರೇ ನಿಂತು ಗೆದ್ದರೂ ಅದು ಎನ್ ಡಿಎ ಗೆಲುವು, ಆ ಮೂಲಕ ಕಾಂಗ್ರೆಸ್ ವಿರೋಧಿ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೋರಾಟಕ್ಕೆ ನಾವೂ ಕೈಜೋಡಿಸಿದ ಹಾಗಾಗುತ್ತದೆ ಎಂದು ಅವರು ಹೇಳಿದರು.
ಈ ಹಿನ್ನಲೆಯಲ್ಲಿ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ಅವರು ಹೇಳಿದರು.
ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ 4-5 ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಕೂಡಲೇ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ಜತೆ ಚರ್ಚೆ ಮಾಡಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಪದೇ ಪದೆ ಭೇಟಿಯಿಂದ ಫಲ ಸಿಗಲ್ಲ:
ಚನ್ನಪಟ್ಟಣಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪದೇ ಪದೆ ಭೇಟಿ ನೀಡುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅವರು ಎಷ್ಟು ಸಲ ಭೇಟಿ ಕೊಟ್ಟರೂ ಉಪಯೋಗ ಇಲ್ಲ. ಅವರು ಈ ಕ್ಷೇತ್ರಕ್ಕೆ ಕೊಟ್ಟ ಕಾಣಿಕೆ ಏನೆಂದು ಜನರಿಗೆ ಗೊತ್ತಿದೆ. ಚುನಾವಣೆ ಬಂದಿದೆ, ಅದಕ್ಕೆ ಪದೇ ಪದೆ ಬರುತ್ತಿದ್ದಾರೆ ಅಷ್ಟೇ. ಚುನಾವಣೆ ಮುಗಿದ ಮೇಲೆ ಈ ಕಡೆ ತಲೆ ಹಾಕುವುದಿಲ್ಲ ಅವರು ಎಂದು ಸಚಿವರು ಹೇಳಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…