ಮೈಸೂರು: ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.
ನಾಳೆ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರವಾಸಿಗರ ದಂಡೇ ಆಗಮಿಸುತ್ತಿದೆ.
ಇಂದೇ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಆಗಮಿಸಿದ್ದು, ಹೋಟೆಲ್‌ಗಳು ಹಾಗೂ ರೆಸ್ಟೋರೆಂಟ್‌ಗಳಲ್ಲಿ ಕೊಠಡಿಗಳು ಫುಲ್ ಭರ್ತಿಯಾಗಿವೆ.
ಇನ್ನು ಮೈಸೂರಿನ ಪ್ರವಾಸಿ ತಾಣಗಳು ತುಂಬಿ ತುಳುಕುತ್ತಿದ್ದು, ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಮೈಸೂರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ ಸೇರಿದಂತೆ ಮೈಸೂರಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ.
ಇನ್ನು ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ದಸರಾ ವಸ್ತು ಪ್ರದರ್ಶನದಲ್ಲೂ ಪ್ರವಾಸಿಗರು ತುಂಬಿ ತುಳುಕುತ್ತಿದ್ದು, ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ರಸ್ತೆಗಳಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದು, ಮಕ್ಕಳು ಹಾಗೂ ಮಹಿಳೆಯರ ಸುರಕ್ಷತೆಗೆ ಶ್ರಮ ವಹಿಸುತ್ತಿದ್ದಾರೆ.