ಬೆಂಗಳೂರು : ಮೈಸೂರು ದಸರಾ ಉತ್ಸವದ ರಜೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ 2300ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ.
ದಸರಾ ಮಹೋತ್ಸವದ ಅಂಗವಾಗಿ ರಾಜ್ಯ ಹಾಗೂ ದೇಶದ ವಿವಿಧ ಕಡೆಗಳಿಂದ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಹಿನ್ನಲೆ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುವುದನ್ನು ಮನಗಂಡು ಕೆಎಸ್‍ಆರ್‍ಟಿಸಿ ವಿಶೇಷ ಬಸ್ ವ್ಯವಸ್ಥೆ ಒದಗಿಸಿದೆ.
ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್‍ಕ್ಲಾಸ್, ಅಂಬಾರಿ ಕ್ಲಬ್‍ಕ್ಲಾಸ್, ಪಲ್ಲಕ್ಕಿ ಸ್ಲೀಪರ್, ಅಶ್ವಮೇಧ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‍ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಪ್ರಕಟಣೆ ತಿಳಿಸಿದೆ.
ದಿನಾಂಕ ಸೆ.26, 27 ಹಾಗೂ 30ರಂದು ಬೆಂಗಳೂರಿನಿಂದ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ 2300ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಶೇಷ ಬಸ್‍ಗಳ ಆಚರಣೆ ಮಾಡಲಾಗುವುದು. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.2 ಹಾಗೂ 5ರಂದು ವಿಶೇಷ ಬಸ್‍ಗಳ ಸೇವೆಯನ್ನು ಒದಗಿಸಲಾಗುವುದು ಎಂದು ಹೇಳಿದೆ.
ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ, ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆ ರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದೆ.





