Mysore
28
few clouds

Social Media

ಶನಿವಾರ, 24 ಜನವರಿ 2026
Light
Dark

ನಾಳೆ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ: ಚಾಮುಂಡಿಬೆಟ್ಟದಲ್ಲಿ ಭರದ ಸಿದ್ಧತೆ

ಮೈಸೂರು: ನಾಳೆ ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಾಳೆ ಬೆಳಿಗ್ಗೆ 10:10 ರಿಂದ 10:40ರ ವೃಶ್ಚಿಕ ಶುಭ ಲಗ್ನದಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಅರ್ಚಕರು ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಶುಚಿಗೊಳಿಸಿ ಸಿದ್ಧತೆ ಮಾಡಿಕೊಂಡಿದ್ದು, ಹಸಿರು ಸೀರೆಯುಡಿಸಿ ಉತ್ಸವ ಮೂರ್ತಿಗೆ ಹಂಸವಾಹಿಸಿ ಅಲಂಕಾರ ಮಾಡಲಾಗುತ್ತದೆ. ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಪೂಜಾಕೈಂಕರ್ಯ ನೆರವೇರಲಿದ್ದು, ಬಳಿಕ ಬೆಳ್ಳಿರಥಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ವೇದಿಕೆಗೆ ತರಲಾಗುತ್ತದೆ. ಆ ಬಳಿಕ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಇನ್ನು ನಾಳೆ ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವದ ಉದ್ಘಾಟನೆ ಕಾರ್ಯಕ್ರಮ ಇರುವುದರಿಂದ ಬೆಟ್ಟದಲ್ಲಿ ಸಿದ್ಧತಾ ಕಾರ್ಯ ನಡೆಯುತ್ತಿದ್ದು, ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಬೃಹತ್ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ. ಜಿಲ್ಲಾಡಳಿತ ಒಂದು ಸಾವಿರ ಆಸನ ವ್ಯವಸ್ಥೆ ಕಲ್ಪಿಸಿದ್ದು, ಮಳೆಯಾಗುವ ಸಂಭವ ಇರುವ ಹಿನ್ನೆಲೆಯಲ್ಲಿ ಜರ್ಮನ್ ಟೆಂಟ್ ವ್ಯವಸ್ಥೆ ಮಾಡಲಾಗಿದೆ.

ಇನ್ನು ದಸರಾ ಉದ್ಘಾಟನೆ ಕಾರ್ಯಕ್ರಮ ಮುಗಿಯುವವರೆಗೂ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದ್ದು, ಆಹ್ವಾನಿತರಿಗೆ ಮಾತ್ರ ಉದ್ಘಾಟನಾ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಲಾಗಿದೆ. ವಿವಿಐಪಿ, ವಿಐಪಿ ಹಾಗೂ ಪಾಸ್ ಹೊಂದಿದವರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ಈಗಾಗಲೇ ವೇದಿಕೆ ಸುತ್ತ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಸಚಿವರು ಹಾಗೂ ಶಾಸಕರು, ಸಂಸದರು ನಾಳಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Tags:
error: Content is protected !!