ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಬೇಹಿಬಾಗ್ ಪ್ರದೇಶದಲ್ಲಿ ಉಗ್ರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು.
ಕಳೆದ ರಾತ್ರಿಯಿಂದಲೇ ಆರಂಭಿಸಿದ್ದ ಕಾರ್ಯಾಚರಣೆ ಇಂದು ಬೆಳಿಗ್ಗೆಯೂ ಮುಂದುವರಿದಿತ್ತು. ಉಗ್ರರು ಅಡಗಿ ಕುಳಿತಿದ್ದ ಸ್ಥಳದತ್ತ ಭದ್ರತಾ ಪಡೆಗಳು ತಲುಪುವ ವೇಳೆಯೇ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು ಎನ್ನಲಾಗಿದೆ.
ಈ ವೇಳೆ ತೀವ್ರ ಕಾರ್ಯಾಚರಣೆ ನಡೆಸಿದ ಯೋಧರು, ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿ, ಐವರನ್ನು ಸೆದೆ ಬಡಿದಿದ್ದಾರೆ.
ಈ ನಡುವೆ ಕಾರ್ಯಾಚರಣೆ ವೇಳೆ ಇಬ್ಬರು ಯೋಧರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿ ಇನ್ನೂ ಹಲವಯ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಕಾರ್ಯಾಚರಣೆ ಮುಂದುವರಿದಿದೆ.
ಈ ಹಿನ್ನೆಲೆಯಲ್ಲಿ ಜಮ್ಮ ಮತ್ತು ಕಾಶ್ಮೀರದ ಎಲ್ಲಾ ನಿಲ್ದಾಣಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದ್ದು, ಹಲವು ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.
ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಕೂಡಲೇ ಕರೆ ಮಾಡಿ ತಿಳಿಸುವಂತೆ ಜನತೆಗೆ ಪೊಲೀಸರು ಸೂಚನೆ ನೀಡಿದ್ದಾರೆ.