ಕಾಬೂಲ್: ಪೂರ್ವ ಆಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೂ ಸುಮಾರು 800 ಮಂದಿ ಮೃತಪಟ್ಟಿದ್ದಾರೆ. ದುರಂತಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಗತ್ಯ ನೆರವಿಗೆ ಧಾವಿಸಿದೆ.
ಭೂಕಂಪವು ಆಫ್ಘಾನಿಸ್ತಾನ ಮತ್ತು ನೆರೆಯ ಪಾಕಿಸ್ತಾನವನ್ನು ಕಂಗೆಡಿಸಿದೆ. ಮನೆಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸುತ್ತಿದ್ದಂತೆ ವಿದೇಶಾಂಗ ಸಚಿವ ಜೈಶಂಕರ್ ಅವರು ಆಫ್ಘಾನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಮಾತನಾಡಿ, ದುರಂತದಲ್ಲಿ ನಾಗರಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಆಫ್ಘಾನಿಸ್ತಾನದ ಸಂಕಷ್ಟದ ಸಮಯದಲ್ಲಿ ಅವರಿಗೆ ಸಹಾಯ ಮಾಡಲು, ಭಾರತವು ಆಹಾರ ಸಾಮಗ್ರಿಗಳನ್ನು ದೇಶಕ್ಕೆ ರವಾನಿಸಿದೆ ಎಂದು ತಿಳಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಆಫ್ಘಾನಿಸ್ತಾನಕ್ಕೆ ಹೆಚ್ಚಿನ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.





