ನವದೆಹಲಿ: ಸಿಸಿಟಿವಿ ಹಾಗೂ ಇತರ ಚುನಾವಣಾ ಸಂಬಂಧಿತ ದಾಖಲೆಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಬಗ್ಗೆ ಇತ್ತೀಚೆಗೆ 1961ರ ಚುನಾವಣಾ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ, ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು(ಜನವರಿ.15) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವೂ, ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಕಾಂಗ್ರೆಸ್ ನಾಯಕ ಅಭಿಷೇಕ್ ಸಿಂಘ್ವಿ ಅವರ ವಾದ-ವಿವಾದಗಳನ್ನು ಆಲಿಸಿ, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಪ್ರತಿಕ್ರಿಯಿಸುವಂತೆ ನೋಟಿಸ್ ಜಾರಿಗೊಳಿಸಿದೆ.
ಇನ್ನೂ ಈ ಅರ್ಜಿಯನ್ನು 2025ರ ಮಾರ್ಚ್ 17ರಿಂದ ಪ್ರಾರಂಭವಾಗುವ ವಾರದಲ್ಲಿ ಅರ್ಜಿ ವಿಚಾರಣೆ ನಡೆಸಲಾಗುವುದು ಆದೇಶ ಹೊರಡಿಸಿದೆ.