ನವದೆಹಲಿ: ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕಿ ಆತಿಶಿ ಮರ್ಲೇನಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶನಿವಾರ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ಪ್ರಮಾಣ ವಚನ ಬೋಧಿಸಿದರು.
ಸೌರಭ್ ಭಾರದ್ವಾಜ್, ಗೋಪಾಲ್ ರಾಯ್, ಇಮ್ರಾನ್ ಹುಸ್ಸೇನ್, ಮುಖೇಶ್ ಅಹ್ಲಾವತ್ ಮತ್ತು ಕೈಲಾಶ್ ಗೆಹ್ಲೋತ್ ಅವರೂ ಸಹ ಸಚಿವರಾಗಿ ಇದೇ ಸಂದರ್ಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಅಬಕಾರಿ ನೀತಿ ಇಲಾಖೆಯ ಅಕ್ರಮ ಹಣ ವರ್ಗಾವಣೆ ಆರೋಪದಿಂದ ನ್ಯಾಯಾಂಗ ಬಂಧನದಲ್ಲಿದ್ದ ಅರವಿಂದ್ ಕೇಜ್ರಿವಾಲ್ ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಕಳೆದವಾರವಷ್ಟೇ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಶಾಸಕಾಂಗ ಪಕ್ಷದ ಸಭೆ ನಡೆಸಿ, ತಮ್ಮ ಉತ್ತರಾಧಿಕಾರಿಯಾಗಿ ಆತಿಶಿ ಹೆಸರನ್ನು ಘೋಷಿಸಿದ್ದರು. ಈ ನಿಲುವನ್ನು ಪಕ್ಷವು ಸರ್ವಾನುಮತದಿಂದ ಒಪ್ಪಿತ್ತು.