ನವದೆಹಲಿ: ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದ್ದಾರೆ. ವಿಳಂಬವಾಗುತ್ತಿರುವ ಯೋಜನೆಗೆ ಮತ್ತಷ್ಟು ವೇಗ ನೀಡುವಂತೆ ಕರೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ನಡೆಸಿದ ಪ್ರಗತಿ ಸಭೆಯಲ್ಲಿ ವಿರೋಧ ಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಎರಡು ಮೆಗಾ ಯೋಜನೆಗಳನ್ನು ಪರಿಶೀಲನೆ ನಡೆಸಿದರು.
ಇವು ಹಲವು ವರ್ಷಗಳಿಂದ ವಿಳಂಬವಾಗುತ್ತಿದ್ದು, ವೆಚ್ಚದಲ್ಲಿ ಭಾರೀ ಏರಿಕೆಯಾಗಿದೆ. ಈ ಯೋಜನೆಗಳಲ್ಲಿ ತ್ವರಿತ ಪ್ರಗತಿ ಸಾಧಿಸುವಂತೆ ಪ್ರಧಾನಿ ಮೋದಿ ತಿಳಿಸಿದ್ದಾರೆ.
2025ರ ಡಿಸೆಂಬರ್.31ರಂದು ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಉಪನಗರ ರೈಲ್ವೆ ಯೋಜನೆ ಮತ್ತು ತೆಲಂಗಾಣದ ಜೆ ಚೊಕ್ಕಾ ರಾವ್ ದೇವದುಲ ಲಿಫ್ಟ್ ನೀರಾವರಿ ಯೋಜನೆಯನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಉಪನಗರ ರೈಲ್ವೆ ಯೋಜನೆಯು ನಾಲ್ಕು ದಶಕಗಳಿಂದ ಚರ್ಚೆಯಲ್ಲಿದೆ. ಅಂತಿಮವಾಗಿ ಇದನ್ನು 2020ರಲ್ಲಿ ಮಂಜೂರು ಮಾಡಲಾಯಿತು. 2023ರಲ್ಲಿ ಪೂರ್ಣಗೊಳ್ಳುವ ಗುರಿಯನ್ನು ಹೊಂದಲಾಗಿತ್ತು. ಆದರೆ, ಇನ್ನೂ ಪೂರ್ಣಗೊಳ್ಳಲು ಸಾಧ್ಯವಾಗಿಲ್ಲ.
ಈ ಯೋಜನೆಯು ನಗರದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲಿದೆ. ಈ ಯೋಜನೆಯು ನಗರ, ಉಪನಗರಗಳು ಮತ್ತು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ನಾಲ್ಕು ಕಾರಿಡಾರ್‌ಗಳಲ್ಲಿ ಸುಮಾರು 148 ಕಿ.ಮೀಗಳನ್ನು ವ್ಯಾಪಿಸಿದೆ.




