Mysore
20
overcast clouds
Light
Dark

ನೀತಿ ಆಯೋಗದ ಸಭೆಯಿಂದ ಅರ್ಧಕ್ಕೆ ಎದ್ದು ಬಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನೀತಿ ಆಯೋಗದ 9ನೇ ಆಡಳಿತ ಮಂಡಳಿ ಸಭೆಯಿಂದ ಅರ್ಧಕ್ಕೆ ಎದ್ದು ಬಂದಿದ್ದಾರೆ. ಸಭೆಯಲ್ಲಿ ಮೈಕ್‌ ಆಫ್‌ ಮಾಡುವ ಮೂಲಕ ಮಾತನಾಡದಂತೆ ತಡೆಹಿಡಿಯಲಾಯಿತು ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.

ಈ ಬಾರಿ ಮಂಡಿಸಿದ ಬಜೆಟ್‌ನಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರವಿರುವ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಹಲವು ಪ್ರತಿಪಕ್ಷಗಳ ಮುಖ್ಯಮಂತ್ರಿಗಳು ಸಭೆಗೆ ಹಾಜರಾಗಿರಲಿಲ್ಲ. ಆದರೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾತ್ರ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡುವಾಗ ಮೈಕ್‌ ಆಫ್‌ ಮಾಡಲಾಗಿತ್ತು ಎಂದು ಆರೋಪಿಸಿದ್ದಾರೆ. ಸಭೆಯಿಂದ ಎದ್ದು ಹೊರ ಬಂದ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಎಲ್ಲಾ ರಾಜ್ಯದ ಸಿಎಂಗಳಿಗೂ ಮಾತನಾಡಲು 20 ನಿಮಿಷ ನೀಡಲಾಯಿತು. ಆದರೆ ನಾನು ಕೇವಲ ಐದು ನಿಮಿಷಗಳ ನಂತರ ಮಾತನಾಡದಂತೆ ತಡೆಯಲಾಯಿತು ಎಂದು ಆರೋಪಿಸಿದರು. ಸಭೆಯಲ್ಲಿ ನನ್ನ ಮಾತನ್ನು ತಡೆದು ಬಂಗಾಳ ಮತ್ತು ಎಲ್ಲಾ ಪ್ರಾದೇಶಿಕ ಪಕ್ಷಗಳಿಗೆ ಅಪಮಾನ ಮಾಡಲಾಗಿದೆ. ಈ ಮೂಲಕ ತಾರತಮ್ಯ ಮಾಡುವುದು ಮತ್ತೆ ಸಾಬೀತಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇನ್ನೂ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಸಭೆ ನಡೆದಿದ್ದು, 2047ರೊಳಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಕಡೆಗೆ ಸಭೆಯಲ್ಲಿ ಒತ್ತು ನೀಡಲಾಯಿತು.