ನವದೆಹಲಿ: ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳೇ ಇಂದು ತನ್ನನ್ನು ಬೆಂಬಲಿಸದಂತಹ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ. ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿ ಮೇಲೆ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳಿಗೆ ನಂಬಿಕೆಯೇ ಇಲ್ಲದಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ ಮಾಡಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಾರ್ಟಿ ಇಂಡಿಯಾ ಒಕ್ಕೂಟದ ಅಂಗ ಪಕ್ಷವೇ ಆಗಿದ್ದರೂ ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಬದಲು ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸುತ್ತಿದೆ. ಹೀಗೆ ಇಂಡಿಯಾ ಒಕ್ಕೂಟದ ಎಲ್ಲಾ ಮಿತ್ರಪಕ್ಷಗಳು ಕಾಂಗ್ರೆಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿವೆ ಎಂದು ಲೇವಡಿ ಮಾಡಿದರು.
ಇನ್ನು ಶರದ್ ಪವಾರ್ ಅವರು ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸುತ್ತೇನೆ. ಕಾಂಗ್ರೆಸ್ ಪಕ್ಷ ಬೆಂಬಲಿಸಲ್ಲ ಎಂದು ಹೇಳಿದ್ದಾರೆ. ಅದೇ ರೀತಿ ಯಾರೊಬ್ಬರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಹಿಂದೇಟು ಹಾಕುತ್ತಿದ್ದಾರೆ. ಅಂದರೆ ಕಾಂಗ್ರೆಸ್ ಅಷ್ಟರ ಮಟ್ಟಿಗೆ ವಿಶ್ವಾಸ ಕಳೆದುಕೊಂಡಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇಷ್ಟೆಲ್ಲಾ ಆದರೂ ಕಾಂಗ್ರೆಸ್ ಸೋಲೊಪ್ಪಿಕೊಳ್ಳಲು ತಯಾರಿಲ್ಲ. ಹೀಗಾಗಿ ಇಂಡಿಯಾ ಮೈತ್ರಿಕೂಟದ ಇತರ ಮಿತ್ರ ಪಕ್ಷಗಳು ಅದರಿಂದ ದೂರ ಸರಿಯುತ್ತಿವೆ. ಆದರೂ ಕಾಂಗ್ರೆಸ್ ಇನ್ನೂ ಸುಧಾರಿಸಿಕೊಳ್ಳಲು ಸಿದ್ಧವಾಗಿಲ್ಲ ಎಂದು ಕಿಡಿಕಾರಿದರು.