ನವದೆಹಲಿ: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸೇರಿದಂತೆ ರಾಜ್ಯದ ಎಲ್ಲಾ ವಿಚಾರಗಳಲ್ಲೂ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ರಾಜ್ಯದ ಸಂಸದರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ವಿಚಾರವಾಗಿ ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಲಾಗಿದೆ. ನಾನು ಸಚಿವನಾಗಿದ್ದಾಗಲೂ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಸಹಕಾರ ನೀಡದೆ ನಿರ್ಲಕ್ಷಿಸುತ್ತಿದೆ ಎಂದರು.
ಈ ಬಾರಿಯ ಬಜೆಟ್‌ನಲ್ಲಿ ಏಮ್ಸ್ ಬಗ್ಗೆ ಪ್ರಸ್ತಾಪ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ, ರಾಜ್ಯಕ್ಕೆ ಏಮ್ಸ್ ನೀಡಲೇಬಾರದು ಎಂದು ಕೇಂದ್ರ ಸರ್ಕಾರ ನಿರ್ಧಾರ ಮಾಡಿದಂತಿದೆ. ಇದರ ವಿರುದ್ಧ ರಾಜ್ಯದ ಸಂಸತ್ ಸದಸ್ಯರು ಹೋರಾಟಕ್ಕೆ ಮುಂದಾಗಿದ್ದಾರೆ ಎಂದರು.
ಜಿ.ಕುಮಾರ ನಾಯಕ ಮಾತನಾಡಿ, ಏಮ್ಸ್‌ಗಾಗಿ ಜಿಲೆಯಲ್ಲಿ ಸಾವಿರಾರು ದಿನಗಳಿಂದ ಹೋರಾಟ ನಡೆಯುತ್ತಿದೆ. ಈ ವಿಚಾರವಾಗಿ ಮುಖ್ಯಮಂತ್ರಿಯವರು ಕೂಡ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೆ, ಏನು ಪ್ರಯೋಜನವಾಗಿಲ್ಲ. ಕೇಂದ್ರಕ್ಕೆ ಮತ್ತೊಮ್ಮೆ ಮನವರಿಕೆ ಮಾಡಿಕೊಡಲು ನಿಯೋಗ ಕಲುಹಿಸಲಾಗುವುದು ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಮಾತನಾಡಿ, ಏಮ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಪಕ್ಷಾತೀತವಾಗಿ ಹೋರಾಟ ಮಾಡಲು ಬಿಜೆಪಿ ಸಂಸದರಿಗೂ ಆಹ್ವಾನ ನೀಡಿದ್ದೆವು. ಆದರೆ, ಅವರು ಬರಲಿಲ್ಲ. ಈ ವಿಷಯದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದರು.




