ದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯೇ ಗೆಲುವು ಸಾಧಿಸಲಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮ್ಮ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕ್ಷೇತ್ರದಲ್ಲಿ ಮತ್ತೆ ಪಾರುಪತ್ಯ ಸಾಧಿಸಲು ಎಚ್.ಡಿ.ಕುಮಾರಸ್ವಾಮಿ ಬಿಗ್ ಪ್ಲಾನ್ ರೂಪಿಸಿದ್ದಾರೆ.
ಕಾಂಗ್ರೆಸ್‌ನಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬರುತ್ತಿರುವ ಬೆನ್ನಲ್ಲೇ ಕುಮಾರಸ್ವಾಮಿ ಈಗ ಸಖತ್ ಪ್ಲಾನ್ ರೂಪಿಸುತ್ತಿದ್ದು, ಈಗಿನಿಂದಲೇ ಚನ್ನಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಅವರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಉಪಚುನಾವಣೆ ನಡೆಯಲು ಇನ್ನೂ ಸಾಕಷ್ಟು ಸಮಯ ಇದೆ. ಸಮಯ ಬಂದಾಗಲೇ ಅಭ್ಯರ್ಥಿ ಆಯ್ಕೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಕಾಂಗ್ರೆಸ್‌ನಿಂದ ಡಿಕೆಶಿ ಅಲ್ಲಾ ಯಾರೇ ಬಂದರೂ ಕ್ಷೇತ್ರದ ಜನತೆ ನಮ್ಮನ್ನು ಕೈಬಿಡಲ್ಲ. ಹಾಗಾಗಿ ಚನ್ನಪಟ್ಟಣ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಸ್ಪರ್ಧೆ ಮಾಡಿ ಭಾರೀ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.