ದೆಹಲಿ: ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದರೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಿಂದ ಸ್ಪರ್ಧಿಸಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಬಳಿಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಲ್ಲಿ ಕೇಂದ್ರ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಸಕಲ ರೀತಿಯಲ್ಲೂ ಸಜ್ಜಾಗುತ್ತಿವೆ. ಹೇಗಾದರೂ ಮಾಡಿ ಕ್ಷೇತ್ರ ಉಳಿಸಿಕೊಳ್ಳಲೇಬೇಕು ಎಂದು ಕುಮಾರಸ್ವಾಮಿ ಭಾರೀ ತಂತ್ರ ರೂಪಿಸುತ್ತಿದ್ದಾರೆ.
ಬಿಜೆಪಿಯಿಂದ ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂಬ ಮಾತಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿಂದು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಪಿ.ಯೋಗೇಶ್ವರ್ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಲಾವಕಾಶ ಬೇಕಾಗಿದೆ. ಈ ಬಗ್ಗೆ ವರಿಷ್ಠರು ಏನು ಹೇಳುತ್ತಾರೋ ಅದನ್ನು ಕೇಳುತ್ತೇನೆ. ನನ್ನನ್ನು ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಎಂದು ಯಾರೂ ಕೇಳಿಲ್ಲ. ಕುಮಾರಸ್ವಾಮಿ ಆಶೀರ್ವಾದ ಇಲ್ಲದೇ ಏನೂ ಕೂಡ ನಡೆಯಲ್ಲ. ಪಕ್ಷದಿಂದ ಟಿಕೆಟ್ ಸಿಗದಿದ್ರೂ ಎನ್‌ಡಿಎಗೆ ನಾನು ಸಂಪೂರ್ಣ ಬೆಂಬಲ ನೀಡುತ್ತೇನೆ. ಎನ್‌ಡಿಎ ಬಿಟ್ಟು ನಾನು ಎಲ್ಲೂ ಕೂಡ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನೂ ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಿಖಿಲ್ ಸ್ಪರ್ಧಿಸಿದ್ರೆ ನನ್ನ ಸಂಪೂರ್ಣ ಬೆಂಬಲವಿದೆ. ನಾನು ಯಾವುದೇ ಒಳಸಂಚು ಮಾಡಲ್ಲ. ನಿಖಿಲ್‌ಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.