ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಮುಂದಿನ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿಸಬೇಕು ಮತ್ತು ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಮಾತನಾಡಿ, ದಿನಕ್ಕೆ 400 ರೂ. ಗುರಿ ಇಟ್ಟುಕೊಂಡು ನರೇಗಾ ವೇತನವನ್ನು ಹೆಚ್ಚಿಸಬೇಕು. ವೇತನ ದರದಲ್ಲಿ ಬದಲಾವಣೆಯ ಅಗತ್ಯವನ್ನು ಮೌಲ್ಯಮಾಪನ ಮಾಡಲು ಸ್ಥಾಯಿ ಸಮಿತಿ ಸ್ಥಾಪಿಸಬೇಕು. ಅಲ್ಲದೇ, ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ
150ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೋವಿಡ್ ಸಮಯದಲ್ಲಿ ನರೇಗಾ ಯೋಜನೆಯು ಜನರ ಹಣಕಾಸಿನ ವಿಷಯದಲ್ಲಿ ನಿರ್ಣಾಯಕ ಪಾತ್ರವಹಿಸಿದೆ. 2019-20ರಲ್ಲಿ 6.16 ಕೋಟಿ ಕುಟುಂಬಗಳು ಈ ಯೋಜನೆಯಡಿಯಲ್ಲಿ ಕೆಲಸ ಮಾಡಲು ವಿನಂತಿಸಿದ್ದರು. ನಂತರ 2020-21ರಲ್ಲಿ ಈ ಸಂಖ್ಯೆಯು 8.55 ಕೋಟಿಗೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.





