ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಉಭಯ ಪಕ್ಷಗಳು ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ನೂಕಾಟ ಹೆಚ್ಚಾದ ಪರಿಣಾಮ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ತಲೆಗೆ ಗಾಯವಾಗಿದೆ. ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಆರೋಪ ಪ್ರತ್ಯಾರೋಪ ಮಾಡುತ್ತಾ ಎರಡು ಪಕ್ಷದ ಸಂಸದರು ಸಂಸತ್ ಆವರಣದಲ್ಲಿ ಪ್ರತಿಭಟಿಸುತ್ತಿದ್ದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ತಳ್ಳಿದ್ದಾರೆ ಎನ್ನಲಾಗಿದೆ. ಪರಿಣಾಮ ನೆಲಕ್ಕೆ ಬಿದ್ದು ಗಾಯಗೊಂಡ ಪ್ರತಾಪ್ ಸಾರಂಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ಸಂವಿಧಾನ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡುತ್ತಾ, ʼಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಇದೊಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರು ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತುʼ ಎಂದು ಹೇಳಿದ್ದರು.
ಇದಕ್ಕೆ ವಿರೋಧ ಪಕ್ಷದ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ತಮ್ಮ ಸೋಷಿಯಲ್ ಮೀಡಿಯಾದ ಖಾತೆಗಳಲ್ಲಿ ಈ ವಿಡಿಯೋ ಹಂಚಿಕೊಳ್ಳುವ ಮೂಲಕ ಗೃಹ ಸಚಿವರು ರಾಜೀನಾಮೆ ನೀಡಬೇಕು. ಅಂಬೇಡ್ಕರ್ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಈ ನಡುವೆ ಇಂದು ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ಇನ್ನೊಂದೆಡೆ ಬಿಜೆಪಿ ಸದಸ್ಯರು ಕಾಂಗ್ರೆಸ್‌ನಿಂದ ಅಂಬೇಡ್ಕರ್ ಅವರಿಗೆ ಅನ್ಯಾಯವಾಗಿದೆ ಎನ್ನುವ ಪ್ಲೇಕಾರ್ಡ್ ಹಿಡಿದು ಸಂಸತ್ ಆವರಣದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆಗಿಳಿದಿದ್ದು,. ಪ್ರತಿಭಟನೆಯಲ್ಲಿ ಕರ್ನಾಟಕದ ಬಿಜೆಪಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜಗ್ಗೇಶ್ ಭಾಗಿಯಾಗಿದ್ದರು.
ಇನ್ನು ಅಮಿತ್ ಶಾ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಪ್ರಧಾನಿ ಮೋದಿ ಅವರು, ಕಾಂಗ್ರೆಸ್ ಅಂಬೇಡ್ಕರ್‌ಗೆ ಅವಮಾನ ಮಾಡಿದೆ ಹೊರತು ಅವರಿಗೆ ಏನು ಮಾಡಿಲ್ಲ. ಅವರನ್ನು ಚುನಾವಣೆಯಲ್ಲಿ ಸೋಲಿಸಿದೆ ಎಂದು ಹೇಳಿದರು. ಈ ವಿಚಾರವನ್ನು ಮಾತನಾಡಲು ಹೊರಟ ಅಮಿತ್ ಶಾ ಅವರ ವಿಡಿಯೋವನ್ನು ತಿರುಚಲಾಗಿದೆ ಎಂದು ಕಾಂಗ್ರೆಸ್ ವಿರುದ್ಧವೇ ಗಂಭೀರ ಆರೋಪ ಮಾಡಿದರು.
ಅಮಿತ್‌ಶಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯಿಸಿದ್ದು, ಅಂಬೇಡ್ಕರ್‌ರಂತಹ ಮಹಾನ್ ವ್ಯಕ್ತಿ ನಮ್ಮ ದೇಶದಲ್ಲಿ ಹುಟ್ಟದಿದ್ದರೆ, ನಾನು ಕುರಿ ಕಾಯಬೇಕಿತ್ತು. ಅವರು ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.