ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಇಂಡಿಯಾ ಕೂಟದ ವಿವಿಧ ಪಕ್ಷಗಳೂ ಭಾಗವಹಿಸಲಿವೆ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಭಾನುವಾರ ದೆಹಲಿಯಲ್ಲಿ ನಡೆದ ಇಂಡಿಯಾ ಕೂಟದ ಬೃಹತ್ ಸಭೆ ಐತಿಹಾಸಿಕವಾಗಿತ್ತು ಎಂದು ಬಣ್ಣಿಸಿದ್ದಾರೆ.
ಸ್ವಾತಂತ್ರ್ಯಾನಂತರ ನಡೆದ ದೊಡ್ಡ ಸಭೆಗಳಲ್ಲಿ ಇದೂ ಒಂದಾಗಿದ್ದು, ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ಹರಿಪ್ರಸಾದ್ ಹೇಳಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಕೆಳಹಂತದ ನಾಯಕರನ್ನೂ ದೆಹಲಿಯ ಸಭೆಗೆ ಕರೆತರಲಾಗಿತ್ತು ಎಂದು ತಿಳಿಸಿದ್ದಾರೆ.
ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎದುರಾಗಿರುವ ಆತಂಕಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಹೋರಾಟದ ಉದ್ದೇಶ ಎಂದು ಅವರು ಹೇಳಿದ್ದಾರೆ. ದೆಹಲಿಯ ಸಭೆಯ ಬೆನ್ನಲ್ಲೇ ಬೆಂಗಳೂರಿನಲ್ಲೂ ಪ್ರತಿಭಟನೆ ನಡೆಸುವ ಮೂಲಕ ಹೋರಾಟ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ನೀಡಿರುವ ವರದಿ ತಿಳಿಸಿದೆ.




