ತಮಿಳುನಾಡು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ.
ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಇಂದು ಮತ್ತು ನಾಳೆ ತಮಿಳುನಾಡಿನಾದ್ಯಂತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾಳೆಯಿಂದ ಚಂಡಮಾರುತ ತೀವ್ರಗೊಳ್ಳಲಿದೆ ಎನ್ನಲಾಗಿದ್ದು, ಇದು ಉತ್ತರ ವಾಯುವ್ಯದ ಕಡೆಗೆ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ನಂತರ ಎರಡು ದಿನಗಳಲ್ಲಿ ಶ್ರೀಲಂಕಾ ಕರಾವಳಿಯಲ್ಲೂ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಇನ್ನು ಆಂಧ್ರಪ್ರದೇಶಕ್ಕೂ ಕೂಡ ಮಳೆಯ ಎಚ್ಚರಿಕೆಯನ್ನು ನೀಡಲಾಗಿದ್ದು, ಇಂದಿನಿಂದ ನವೆಂಬರ್.29ರವರೆಗೂ ತೀವ್ರ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಇನ್ನು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲೂ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಮಳೆಯ ನಡುವೆ ಭಾರೀ ಚಳಿಯ ವಾತಾವರಣ ನಿರ್ಮಾಣವಾಗಲಿದೆ ಎಂದು ಮಾಹಿತಿ ನೀಡಿದೆ.