ಛತ್ತೀಸ್‌ಗಢ: ಇಲ್ಲಿನ ಬಿಜಾಪುರದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ಮಂದಿ ಹತರಾಗಿದ್ದಾರೆ.
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಾಹಿತಿ ಪ್ರಕಾರ 12 ಮಂದಿ ನಕ್ಸಲರು ಸಾವನ್ನಪ್ಪಿದ್ದು, ಹಲವು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅರಣ್ಯ ಪ್ರದೇಶದಲ್ಲಿ ಇನ್ನೂ ಹಲವರು ಅಡಗಿರುವ ಶಂಕೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಎಲ್ಲೆಡೆ ಪೊಲೀಸರು ಕೂಡ ಕಟ್ಟೆಚ್ಚರ ವಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಎನ್‌ಕೌಂಟರ್ ನಡೆಯುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಎಲ್ಲಾ ಬಸ್ ನಿಲ್ದಾಣಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಿದ್ದು, ಅನುಮಾನಾಸ್ಪದ ವ್ಯಕ್ತಿಗಳು ಕಂಡರೆ ಮಾಹಿತಿ ನೀಡುವಂತೆ ಸ್ಥಳೀಯರಿಗೆ ಸೂಚನೆ ನೀಡಿದ್ದಾರೆ.