ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಭಾರತೀಯ ಸೇನೆಯ ಕ್ಯಾಪ್ಟನ್ ಹುತಾತ್ಮರಾಗಿದ್ದು, ಯೋಧರೊಬ್ಬರು ಗಾಯಗೊಂಡಿದ್ದಾರೆ.
ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.
ಉಗ್ರರ ಬಳಿ ಕಾರ್ಬೈನ್ ಬಂದೂಕು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಗುಂಡಿನ ಚಕಮಕಿಯಲ್ಲಿ ಓಬ್ಬರು ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳು ಯೋಧನಿಗೆ ಶ್ರೀನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಮ್ಮು-ಕಾಶ್ಮೀರದ ಸುತ್ತ ಭಾರತೀಯ ಸೇನೆ ಹದ್ದಿನ ಕಣ್ಣಿಟ್ಟಿದ್ದು, ತಗ್ಗು ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ನಿಯೋಜನೆ ಮಾಡಲಾಗಿದೆ. ಕಾಶ್ಮೀರದಲ್ಲಿ ಪೊಲೀಸರು ಕೂಡ ಹದ್ದಿನ ಕಣ್ಣಿಟ್ಟಿದ್ದು, ಉಗ್ರರನ್ನು ಮಟ್ಟಹಾಕಲು ಹೋರಾಟ ನಡೆಸುತ್ತಿದ್ದಾರೆ.
ಇತ್ತ ಜಮ್ಮು-ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳಿಗೆ ಸಂಬಂಧಿಸಿದಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.