ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾವಿನ ಸಂಖ್ಯೆ ಏರಿಕೆಯಾಗುವ ಸಂಭವ ಇದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಘಟನೆಗೆ ಸಂಬಂಧಿಸಿದಂತೆ ಕೆ.ಕಣ್ಣಾಕುಟ್ಟಿ (49) ಎಂಬವರನ್ನು ಬಂಧಿಸಲಾಗಿದ್ದು, 200 ಲೀಟರ್ ನಕಲಿ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಕಲಿ ಮದ್ಯ ದುರಂತಕ್ಕೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ಸೂಚಿಸಿದ್ದು, ಪ್ರಕರಣವನ್ನು ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
‘ಕಲ್ಲಕುರಿಚಿ ದುರಂತ ಆಘಾತವನ್ನು ಉಂಟು ಮಾಡಿದೆ. ಆರೋಪಿಯನ್ನು ಬಂಧಿಸಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ.
ತಮಿಳುನಾಡು ರಾಜ್ಯಪಾಲ ಆರ್.ವಿ.ರವಿ ಸಹ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂಭತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.



