ಉತ್ತರ ಪ್ರದೇಶ: ವಾರಾಣಸಿಯ ಕ್ಯಾಂಟ್ ರೈಲು ನಿಲ್ದಾಣದ ವಾಹನ ನಿಲುಗಡೆ ಪ್ರದೇಶದಲ್ಲಿ ಅಚಾನಕ್ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 150ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಶುಕ್ರವಾರ (ನ.29) ತಡರಾತ್ರಿ ಘಟನೆ ಸಂಭವಿಸಿದೆ. ಈ ಬಗ್ಗೆ ಇಂದು(ನ.30) ಮಾಹಿತಿ ಪಡೆದು ಘಟನೆ ನಡೆದ ಸ್ಥಳಕ್ಕೆ ಧಾವಿಸಿದ ರೈಲ್ವೆ ರಕ್ಷಣಾ ಪಡೆ, ಸರ್ಕಾರಿ ರೈಲ್ವೆ ಪೊಲೀಸ್ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ಅವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಲಾಲ್ಜಿ ಚೌಧರಿ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ರೈಲ್ವೆ ನೌಕರರಿಗಾಗಿ ವಾಹನ ನಿಲುಗಡೆ ವ್ಯವಸ್ಥೆಯನ್ನು ನಿರ್ಮಿಸಲಾಗಿತ್ತು. ಇದೀಗ ಅಗ್ನಿ ಅವಘಡದಿಂದ ಸಾಕಷ್ಟು ಹಾನಿಯಾಗಿದೆ. ಆದರೆ ಈ ಘಟನೆಯಿಂದ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದ್ದಾರೆ.