ಹೊಸದಿಲ್ಲಿ: 18ನೇ ಲೋಕಸಭೆಯ ಅಧಿವೇಶನ ನಾಳೆಯಿಂದ (ಜೂನ್ 24) ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಹೊಸ ಸಂಸದರು ಮೊದಲ ಎರಡು ದಿನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಸಂಸದರಿಗೆ ಪ್ರಮಾಣವಚನ ಬೋಧಿಸಲು ಹಂಗಾಮಿ ಸ್ಪೀಕರ್ ಆಗಿ ಮಹತಾಬ್ ಭತೃಹರಿ ಅವರನ್ನು ನೇಮಕ ಮಾಡಿರುವುದು ವಿರೋಧ ಪಕ್ಷಗಳ ಟೀಕೆಗೆ ಗುರಿಯಾಗಿದೆ.
ಕಾಂಗ್ರೆಸ್‌ನ ಹಿರಿಯ ಸಂಸದ ಕೆ.ಸುರೇಶ್ ಅವರು ಲೋಕಸಭೆಯಲ್ಲಿನ ಅತೀ ಹಿರಿಯ ಸದಸ್ಯರಾಗಿದ್ದರೂ ಜಾತಿ ಕಾರಣಕ್ಕಾಗಿ ಅವರನ್ನು ಕಡೆಗಣಿಸಲಾಗಿದೆ. ಬದಲಾಗಿ ಮಹತಾಬ್ ಭತೃಹರಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ ಎಂದು ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.
ಮೊದಲ ಎರಡು ದಿನ ನೂತನ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇದೇ ಜೂನ್ 26ರಂದು ನೂತನ ಲೋಕಸಭಾ ಅಧ್ಯಕ್ಷರ ಆಯ್ಕೆ ನಡೆಯಲಿದೆ.
ಸ್ಪೀಕರ್ ಪಟ್ಟವನ್ನು ಬಿಜೆಪಿ ತನ್ನ ಬಳಿಯೇ ಉಳಿಸಿಕೊಳ್ಳಲು ಹರಸಾಹಸ ನಡೆಸಿದ್ದು, ಎನ್‌ಡಿಎ ಮಿತ್ರ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಎಸ್ ಪಕ್ಷಗಳು ನಮಗೆ ಲೋಕಸಭಾ ಅಧ್ಯಕ್ಷ ಸ್ಥಾನ ನೀಡುವಂತೆ ಪಟ್ಟು ಹಿಡಿದಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಅಧ್ಯಕ್ಷ ಸ್ಥಾನ ಯಾರ ಪಾಲಾಗಲಿದೆ ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಇನ್ನೂ ಈ ಬಾರಿ ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಉಪ ಸಭಾಧ್ಯಕ್ಷ ಸ್ಥಾನವನ್ನು ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ ಬಿಟ್ಟು ಕೊಡುವಂತೆ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿವೆ.





