ಠಾಣೆ: ಭಾರತ ಕ್ರಿಕೆಟ್ ತಂಡ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಮಹಾರಾಷ್ಟ್ರದ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಿಕ್ ಅವರು ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಬ್ಳಿ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಕಾಂಬ್ಳೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು.
ಇನ್ನು ಕಾಂಬ್ಳೆ ಅವರಿಗೆ ಮೂತ್ರನಾಳದ ಸೋಂಕು ಕಾಣಿಸಿಕೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿದ ಮಹಾರಾಷ್ಟ್ರ ಸಚಿವರು, ಕಾಂಬ್ಳಿ ಅವರು ಸದಾ ತಮ್ಮ ಪ್ರದರ್ಶನದಿಂದ ದೇಶ ಹೆಮ್ಮೆಪಡುವಂತೆ ಮಾಡಿದ್ದಾರೆ. ಅವರ ಕಣ್ಣುಗಳು ಈಗಲೂ ಮೈದಾನದಲ್ಲಿದ್ದ ದೃಢತೆ ಮತ್ತು ಹೋರಾಟದ ಮನೋಭಾವವನ್ನು ಪ್ರತಿಬಿಂಬಿಸುತ್ತಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ನಾನು ಕಾಂಬ್ಳಿ ಅವರ ಕುಟುಂಬದವರ ಜೊತೆಗೂ ಮಾತನಾಡಿದ್ದೇನೆ. ಅವರಿಗೆ ಉತ್ತಮ ವೈದ್ಯಕೀಯ ನೆರವು ಒದಗಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ತಿಳಿಸಿದರು.





