ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ದೆಹಲಿಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಿಂಚು ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುತ್ತಿರುವ ಪರಿಣಾಮ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಉಂಟಾಗಿದ್ದು, ನೂರಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ.
ವಿಮಾನ ವಿಳಂಬದ ಬಗ್ಗೆ ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ಪರಿಶೀಲಿಸುವಂತೆ ಐಜಿಐ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ಸೂಚನೆ ನೀಡಿದೆ. ಐಎಂಡಿ ಮುನ್ಸೂಚನೆಯ ಪ್ರಕಾರ ದೆಹಲಿಯಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿ ಇದೆ. ಕಾರ್ಯಾಚರಣೆಗಳು ಪ್ರಸ್ತುತ ಸಾಮಾನ್ಯವಾಗಿದೆ ಎಂದು ದೆಹಲಿಯ ಐಜಿಐ ವಿಮಾನ ನಿಲ್ದಾಣ ಸಲಹೆ ನೀಡಿದೆ.




