ಹೊಸದಿಲ್ಲಿ : ಮಾಜಿ ಉಪರಾಷ್ಟಪತಿ ಜಗದೀಶ್ ಧನ್ಕರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಕರ್ನಾಟಕ ಹಾಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವಾರ ಹೆಸರುಗಳು ಕೇಳಿ ಬಂದಿವೆ.
ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್, ಸಿಕ್ಕಿಂ ರಾಜ್ಯಪಾಲ ಓಂ ಮಾಥುರ್ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸೇರಿದಂತೆ ಸಂಭಾವ್ಯ ಆಯ್ಕೆಗಳ ಕುರಿತು ಚರ್ಚೆ ಪ್ರಾರಂಭವಾಗಿದೆ.
ಏತನ್ಮಧ್ಯೆ, ಬಿಜೆಪಿ ಪಕ್ಷದ ಮಾತೃ ಸಂಘಟನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಬಲವಾದ ಸೈದ್ಧಾಂತಿಕ ಬೇರುಗಳನ್ನು ಹೊಂದಿರುವ ಬಿಜೆಪಿ ನಾಯಕರೊಬ್ಬರು ನಾಮನಿರ್ದೇಶಿತರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹಾಗಾಗಿ, ರೇಸ್ನಲ್ಲಿ ಸಚಿವರಾದ ರಾಜನಾಥ್ ಸಿಂಗ್, ಜೆಪಿ ನಡ್ಡಾ ಹಾಗೂ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಹೆಸರುಗಳು ಕೇಳಿಬರುತ್ತಿವೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸೈದ್ಧಾಂತಿಕ ಚಿಂತಕರಾದ ಶೇಷಾದ್ರಿ ಚಾರಿ ಅವರನ್ನು ಅಭ್ಯರ್ಥಿ ಮಾಡುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿದೆ ಎನ್ನಲಾಗಿದ್ದು, ಬಿಹಾರ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜ್ಯಸಭೆಯ ಹಾಲಿ ಉಪ ಸಭಾಪತಿ ಹರಿವಂಶ್ ಅವರ ಹೆಸರೂ ಪರಿಗಣನೆಯಲ್ಲಿದೆ. ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನ್‌ಕರ್ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಇದೇ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಕಸರತ್ತು ಆರಂಭಿಸಿದೆ.
ಮುಂದಿನ ಉಪರಾಷ್ಟ್ರಪತಿ ತಮ್ಮ ಪಕ್ಷದವರೇ ಆಗಿರಬೇಕು ಮತ್ತು ಪಕ್ಷದ ಹಾಗೂ ಆರ್‌ಎಸ್‌ಎಸ್ ಸಿದ್ಧಾಂತದೊಂದಿಗೆ ಬಲವಾಗಿ ಸಂಬಂಧ ಹೊಂದಿರಬೇಕು ಎಂದು ಬಿಜೆಪಿ ನಾಯಕರು ಈ ಹಿಂದೆ ಸ್ಪಷ್ಟಪಡಿಸಿದ್ದರು.
ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಂಬಂಧ ಬಿಜೆಪಿ ಸಂಸದೀಯ ಮಂಡಳಿ ಭಾನುವಾರ ಸಭೆ ಸೇರುವ ಸಾಧ್ಯತೆ ಇದೆ.
ಬಿಜೆಪಿ ಮತ್ತು ಎನ್‌ಡಿಎ ಮೈತ್ರಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ಉಪರಾಷ್ಟ್ರಪತಿ ಸ್ಥಾನ ತೆರವಾಗಿದ್ದು, ಸೆಪ್ಟೆಂಬರ್ 9ರಂದು ಚುನಾವಣೆ ನಿಗದಿಯಾಗಿದೆ. ಆಗಸ್ಟ್ 18ರಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಈಗಾಗಲೇ ಮೈತ್ರಿಕೂಟದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರ ನೀಡಲಾಗಿದೆ.





