ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕನ್ನಡಿಗರೊಬ್ಬರು ಬಲಿಯಾಗಿದ್ದಾರೆ.
ಪಲ್ಗಾಮ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ್ದು, ಅವರಲ್ಲಿ ಕರ್ನಾಟಕದ ಶಿವಮೊಗ್ಗ ಮೂಲದ ಓರ್ವರು ಬಲಿಯಾಗಿದ್ದಾರೆ.
ಗುಂಡಿನ ದಾಳಿಯಲ್ಲಿ 12ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತ ಕನ್ನಡಿಗ ಶಿವಮೊಗ್ಗ ನಗರದ ನಿವಾಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಅವರ ಪತ್ನಿ ಪಲ್ಲವಿ ಗಾಯಗೊಂಡಿದ್ದು, ಕಣ್ಣೆದುರೇ ಪತಿಯನ್ನು ಕಳೆದುಕೊಂಡು ಕಣ್ಣೀರಾಕಿದ್ದಾರೆ.
ಇನ್ನೋರ್ವ ಕನ್ನಡಿಗ ಅಭಿಜ್ಞರಾವ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಘಟನೆ ನಡೆಯುತ್ತಿದ್ದಂತೆ ಪ್ರಧಾನಿ ನರೇಂದ್ರ ಅವರು ಗೃಹ ಸಚಿವ ಅಮಿತ್ ಶಾಗೆ ಕರೆ ಮಾಡಿದ್ದು, ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಗುಂಡಿನ ದಾಳಿ ನಡೆಸಿರುವವರಿಗೆ ತಕ್ಕ ಪಾಠ ಕಲಿಸುತ್ತೇವೆ. ದಾಳಿಯಲ್ಲಿ ಭಾಗಿಯಾದವರನ್ನು ಬಿಡಲ್ಲ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.





