ನವದೆಹಲಿ/ಮಧ್ಯ ಪ್ರದೇಶ: ಶೀಘ್ರದಲ್ಲಿಯೇ ದೇಶದ 543 ಲೋಕಸಭಾ ಕ್ಷೇತ್ರಗಳಲ್ಲಿ ನೂತನವಾಗಿ ಪಾಸ್‌ಪೋರ್ಟ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ತಿಳಿಸಿದ್ದಾರೆ.
ಮಧ್ಯಪ್ರದೇಶದ ಗುಣದಲ್ಲಿ ಇಂದು(ಜನವರಿ.12) ನೂತನ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, 2025-26ನೇ ಸಾಲಿನಲ್ಲಿ ಈ ರಾಜ್ಯದಲ್ಲಿ ಹೊಸದಾಗಿ ಆರು ಪಾಸ್‌ಪೋರ್ಟ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಘೋಷಿಸಿದರು.
ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ್ಯಾಂತ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ನೂತನ ಪಾಸ್‌ಪೋರ್ಟ್ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಿದ್ದಾರೆ. ಅಲ್ಲದೇ ಈ ಬಗ್ಗೆ ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಅಂಚೆ ಇಲಾಖೆಯೂ ಈ ನಿರ್ಣಯವನ್ನು ನನಸಾಗಿಸಲು ಬದ್ಧವಾಗಿದೆ. ಹೀಗಾಗಿ ಭಾರತದ 543 ಲೋಕಸಭಾ ಕ್ಷೇತ್ರಗಳಲ್ಲಿ ಹೊಸ ಪಾಸ್‌ಪೋರ್ಟ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆ ವತಿಯಿಂದ ದೇಶಾದ್ಯಂತ ಸುಮಾರು 6,000 ಅಂಚೆ ಕಚೇರಿಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.