ಶ್ರೀನಗರ: ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ಓರ್ವ ಮಹಿಳೆ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಿಲುಕಿ ಸಾವನ್ನಪ್ಪಿದ್ದಾರೆ. ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕುಸಿತದ ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಯಾತ್ರೆಯ ಮಾರ್ಗಗಳ ದುರಸ್ಥಿ ಕಾರ್ಯ ಮುಗಿಯುವವರೆಗೂ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





