ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಅವಘಡಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಮಹಾಕುಂಭಮೇಳವನ್ನು ಉತ್ತಮವಾಗಿ ನಿರ್ವಹಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಕಾರಣ ಎಂದು ಆರೋಪಿಸಿದ್ದಾರೆ.
ಇಂದು ಮೌನಿ ಅಮಾವಾಸ್ಯೆ ದಿನವಾದ ಹಿನ್ನೆಲೆಯಲ್ಲಿ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಲಕ್ಷಾಂತರ ಮಂದಿ ಪ್ರಯಾಗ್ ರಾಜ್‌ನಲ್ಲಿ ಜಮಾಯಿಸಿದ್ದಾರೆ.
ಈ ನಡುವೆ ಕಾಲ್ತುಳಿತ ಉಂಟಾಗಿ ಹಲವರು ಮೃತಪಟ್ಟಿರುವ ಹಾಗೂ ಅನೇಕರು ಗಾಯಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಈ ಘಟನೆ ನಡೆದಿರುವುದು ದುಃಖಕರ ಸಂಗತಿಯಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆಯಲ್ಲಿ ಗಾಯಗೊಂಡಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದರು.
ಇನ್ನೂ ಅನೇಕ ಪವಿತ್ರ ಸ್ನಾನ ಬಾಕಿಯಿವೆ. ಈಗಲಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸುಧಾರಣೆ ತರಬೇಕಿದೆ ಎಂದು ಆಗ್ರಹಿಸಿದರು.