ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ)ಯ ಅಧ್ಯಕ್ಷೆ ಮೆಹಬೂಬ ಮುಫ್ತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಘಟಕವನ್ನು ಶನಿವಾರ ವಿಸರ್ಜಿಸಿದ್ದಾರೆ.
ಮುಂದಿನ ದಿನಗಳಲ್ಲಿ ಹಿರಿಯ ನಾಯಕರೊಂದಿಗೆ ಸಮಾಲೋಚನೆ ನಡೆಸಿ, ಪಕ್ಷದ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಘಟಕದ ವಿಭಾಗಗಳನ್ನು ರಚಿಸಲಾಗುವುದು ಎಂದು ಪಿಡಿಪಿ ಪಕ್ಷ ತಿಳಿಸಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.
ಇತ್ತೀಚೆಗೆ ಮುಕ್ತಾಯಗೊಂಡ ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಕೇವಲ ಮೂರು ಸ್ಥಾನಗೆದ್ದು ಭಾರಿ ಮುಖಭಂಗ ಅನುಭವಿಸಿದ ಬಳಿಕ, ಪಕ್ಷದ ಪರಾಮರ್ಶೆ ಸಭೆಯ ನಡೆಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಮುಫ್ತಿ ಅವರಿಗೆ ಈ ಫಲಿತಾಂಶ ಮುಜುಗರವನ್ನುಂಟು ಮಾಡಿದೆ. ಚುನಾವಣೆಯಲ್ಲಿ ಅತಿಹೆಚ್ಚು ಸ್ಥಾನ ಗೆದ್ದಿದ್ದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಒಮರ್ ಅಬ್ದುಲ್ಲಾ ಅವರು ಇಂಡಿಯಾ ಮೈತ್ರಿಕೂಟದ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದಾರೆ.