ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಕಾಲ್ತುಳಿತ ಪ್ರಕರಣದಲ್ಲಿ ಹಲವಾರು ಸಾರ್ವಜನಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಕಾಲ್ತುಳಿತ ಅತ್ಯಂತ ದುಃಖಕರವಾಗಿದೆ. ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಅಲ್ಲದೇ ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ನಿರತವಾಗಿದೆ. ಈ ಸಲುವಾಗಿ ನಾನು ಮುಖ್ಯಮಂತ್ರಿ ಯೋಗಿ ಜೀ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನೂ ಇಂದು ಮೌನಿ ಅಮಾವಾಸ್ಯೆ ಇರುವ ಹಿನ್ನೆಲೆಯಲ್ಲಿ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವ ಸಲುವಾಗಿ ಭಕ್ತಸಾಗರವೇ ಹರಿದು ಬಂದಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 15ಕ್ಕೂ ಹೆಚ್ಚು ಸಾರ್ವಜನಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ಗೆ ಕರೆ ಮಾಡಿ ಮಾಹಿತಿ ಪಡೆಯಲಾಗಿದ್ದು, ಕೇಂದ್ರದಿಂದ ಸಾಧ್ಯವಿರುವ ಎಲ್ಲಾ ನೆರವುಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.