ಕಠ್ಮಂಡು : ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ವಿಧಿಸಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯು ಹಿಂಸಾಚಾರಣೆ ತಿರುಗಿದ್ದು, 16 ಜನರು ಮೃತಪಟ್ಟಿದ್ದಾರೆ.
ಘಟನೆಯಲ್ಲಿ 87ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ನಕಲಿ ಖಾತೆಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಸೈಬರ್ ಅಪರಾಧ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಳೆದ ವಾರ ಎಕ್ಸ್, ಫೇಸ್ಬುಕ್, ವಾಟ್ಸಪ್ ಸೇರಿದಂತೆ 26 ಸಾಮಾಜಿಕ ಜಾಲತಾಣಗಳನ್ನು ನೇಪಾಳ ಸರ್ಕಾರವು ನಿಷೇಧಿಸಿತ್ತು. ನೇಪಾಳ ಸರ್ಕಾರವು ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದೆ, ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ ಎಂದು ಆರೋಪಿಸಿ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.





