ಪಾಟ್ನಾ: ಮಹತ್ವದ ಬೆಳವಣಿಗೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಘೋಷಣೆಗೂ ಮುನ್ನ ಪ್ರಮುಖ ನಾರಿ ಶಕ್ತಿ ಅಭಿಯಾನದಲ್ಲಿ ರಾಜ್ಯದ ಪ್ರತಿಯೊಂದು ವರ್ಗದ ಸರ್ಕಾರಿ ಉದ್ಯೋಗಗಳಲ್ಲಿನ ಎಲ್ಲಾ ಹುದ್ದೆಗಳಲ್ಲಿ ಶೇಕಡಾ 35 ರಷ್ಟು ಹುದ್ದೆಗಳನ್ನು ಬಿಹಾರದ ಖಾಯಂ ನಿವಾಸಿಗಳಾಗಿರುವ ಮಹಿಳೆಯರಿಗೆ ಮಾತ್ರ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ.
ಪಾಟ್ನಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 243 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಬಿಹಾರದಲ್ಲಿ ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಇದು ಹಾಲಿ ಸರ್ಕಾರಕ್ಕೆ ಭಾರೀ ಬಲ ನೀಡಲಿದೆ ಎಂದು ವ್ಯಾಖ್ಯಾನಿಸಲಾಗಿದೆ.
ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವು ಎಲ್ಲಾ ಸರ್ಕಾರಿ ಸೇವೆಗಳು ಮತ್ತು ಹುದ್ದೆಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇ.35 ಮೀಸಲಾತಿಯನ್ನು ಘೋಷಿಸಿದೆ.
ಎಲ್ಲಾ ಹಂತಗಳು ಮತ್ತು ಇಲಾಖೆಗಳಲ್ಲಿ ಸಾರ್ವಜನಿಕ ಸೇವೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಬಿಹಾರದಲ್ಲಿ ಹೆಚ್ಚಿನ ಮಹಿಳೆಯರು ಕಾರ್ಯಪಡೆಗೆ ಪ್ರವೇಶಿಸುವುದನ್ನು ಮತ್ತು ಆಡಳಿತದಲ್ಲಿ ದೊಡ್ಡ ಪಾತ್ರವನ್ನು ವಹಿಸುವುದನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಈ ನಿರ್ಧಾರ ಹೊಂದಿದೆ ಎಂದು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.





