ನವದೆಹಲಿ: ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಇಲ್ಲ. ಇಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ಮೈಸೂರು ದಸರಾದಲ್ಲಿ ಏರ್‌ಶೋ ನಡೆಸಲು ಅನುಮತಿ ಕೇಳುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕೇಂದ್ರ ಸಚಿವರ ಜೊತೆ ನೀರಾವರಿ ಯೋಜನೆಗಳ ಬಗ್ಗೆ, ಅರಣ್ಯ ಪ್ರದೇಶದ ಜಾಗ ಸ್ವಾಧೀನಕ್ಕೆ ಸಂಬಂಧಿಸಿದಂತೆ ಚರ್ಚೆ ಮಾಡಲಾಗಿದೆ. ಮಹದಾಯಿ ಯೋಜನೆಗೆ ಗೋವಾ ಸರ್ಕಾರ ತಕರಾರು ತೆಗೆದಿದೆ. ಗೋವಾ ಸರ್ಕಾರದ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಮೇಕೆದಾಟು ಯೋಜನೆ ಕೃಷ್ಣ ನದಿ ನೀರು ಯೋಜನೆ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸಿದ್ದೇವೆ ಎಂದರು.
ಕೇಂದ್ರ ಸಚಿವರು ಸಮಸ್ಯೆ ಇತ್ಯರ್ಥಪಡಿಸುವ ಭರವಸೆ ನೀಡಿದ್ದಾರೆ. ಎತ್ತಿನಹೊಳೆ ಯೋಜನೆಗೆ ಅನುದಾನ ನೀಡುವಂತೆ ಕೇಳಿದ್ದೇವೆ. ಯೋಜನೆಗಳಿಗೆ ನೀಡಬೇಕಿದ್ದ ಅನುದಾನಕ್ಕೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.





