ಹೊಸದಿಲ್ಲಿ : ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲ್‌ನಂತಹ ಉತ್ಪನ್ನಗಳನ್ನು ಸದ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.
ರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಇದನ್ನು ಖಚಿತಪಡಿಸಿದ್ದು, ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲಿಕ್ ಪಾನೀಯಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸದಿರಲು ಕಾರಣವೇನೆಂದು ಪ್ರಶ್ನಿಸಿದಾಗ, ಪ್ರಸ್ತುತ ಯೋಜನೆಯಲ್ಲಿ ತಕ್ಷಣಕ್ಕೆ ಇವುಗಳನ್ನು ಸೇರಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.
ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲ್‌ನಂತಹ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವುದರಿಂದ ರಾಜ್ಯ ಸರ್ಕಾರಗಳಿಗೆ ಆದಾಯದ ಮೇಲೆ ಗಂಭೀರ ಪರಿಣಾಮ ಬೀರಬಹುದಾದ ಕಾರಣ, ಸದ್ಯಕ್ಕೆ ಈ ಉತ್ಪನ್ನಗಳನ್ನು ಜಿಎಸ್‌ಟಿಯಿಂದ ಹೊರಗಿಡುವ ನಿರ್ಧಾರವನ್ನು ಮುಂದುವರಿಸಲಾಗುವುದು ಎಂದು ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ಆದರೆ, ಭವಿಷ್ಯದಲ್ಲಿ ಈ ವಿಷಯದ ಮೇಲೆ ಚರ್ಚೆ ನಡೆಯುವ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿಲ್ಲ.





