ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಜುಲೈ21.ರಿಂದ ಪ್ರಾರಂಭವಾಗಿ ಆಗಸ್ಟ್.12ರವರೆಗೆ ನಡೆಯಲಿದೆ.
ಮೂರು ತಿಂಗಳ ವಿರಾಮದ ನಂತರ ಸಂಸತ್ತಿನ ಉಭಯ ಸದನಗಳು ಜುಲೈ 21 ರಂದು ಬೆಳಿಗ್ಗೆ 11 ಗಂಟೆಗೆ ಸಭೆ ಸೇರಲಿವೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಸಚಿವ ಕಿರಣ್ ರಿಜಿಜು ಮಾಹಿತಿ ಹಂಚಿಕೊಂಡಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನದ ದಿನಾಂಕಗಳನ್ನು ಶಿಫಾರಸು ಮಾಡಿದೆ.
ಸಂಸತ್ತಿನ ಬಜೆಟ್ ಅಧಿವೇಶನವು ಈ ವರ್ಷದ ಜನವರಿ 31 ರಂದು ಪ್ರಾರಂಭವಾಗಿ, ಲೋಕಸಭೆ ಮತ್ತು ರಾಜ್ಯಸಭೆ ಎರಡನ್ನೂ ಏಪ್ರಿಲ್ 4ರಂದು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ಸೇನಾ ಕಾರ್ಯಾಚರಣೆಯಾದ ಆಪರೇಷನ್ ಸಿಂಧೂರ್ ಬಗ್ಗೆ ಚರ್ಚಿಸಲು ವಿರೋಧ ಪಕ್ಷದ ನಾಯಕರು ವಿಶೇಷ ಸಂಸತ್ ಅಧಿವೇಶನ ಕರೆಯುವಂತೆ ಒತ್ತಾಯಿಸಿದ ಬೆನ್ನಲ್ಲೇ, ಮುಂಗಾರು ಅಧಿವೇಶನದ ದಿನಾಂಕ ಘೋಷಣೆಯಾಗಿದೆ.
ಅಧಿವೇಶನದ ಸಮಯದಲ್ಲಿ ಆಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯಲಿದೆ. ಪ್ರತಿಯೊಂದು ಅಧಿವೇಶನವು ವಿಶೇಷವಾಗಿರುತ್ತದೆ ಮತ್ತು ನಾವು ಆಪರೇಷನ್ ಸಿಂಧೂರ್ ಸೇರಿದಂತೆ ಎಲ್ಲಾ ವಿಷಯಗಳನ್ನು ಚರ್ಚಿಸುತ್ತೇವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.





