ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಕುರಿತು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ನಿನ್ನೆ ಚುನಾವಣಾ ಸಮಾವೇಶದಲ್ಲಿ ಮಾತನಾಡುತ್ತಿದ್ದ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು.
ಆದರೆ ತಕ್ಷಣವೇ ಸುಧಾರಿಸಿಕೊಂಡು ಮಾತನಾಡಿದ ಖರ್ಗೆ, ನಾನು ಇಷ್ಟು ಬೇಗ ಸಾಯಲ್ಲ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿಯೇ ಸಾಯುವುದು ಎಂದು ಹೇಳಿದ್ದರು.
ಈ ವಿಚಾರ ತಿಳಿಯುತ್ತಿದ್ದಂತೆ ಪ್ರಧಾನಿ ಮೋದಿ ಅವರು ಖರ್ಗೆಎ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಅಮಿತ್ ಶಾ ಅವರು, ಮಲ್ಲಿಕಾರ್ಜುನ ಖರ್ಗೆ ತಮ್ಮ ವೈಯಕ್ತಿಕ ಆರೋಗ್ಯ ವಿಚಾರದಲ್ಲಿ ಅನಗತ್ಯವಾಗಿ ನರೇಂದ್ರ ಮೋದಿ ಅವರನ್ನು ಎಳೆದು ತರುತ್ತಿದ್ದಾರೆ. ಇದು ಅವರ ದ್ವೇಷ ಪ್ರದರ್ಶನ ಮಾಡುತ್ತದೆ. ಮೋದಿಯವರ ಬಗ್ಗೆ ನಿರಂತರವಾಗಿ ಯೋಚಿಸುತ್ತಿದ್ದಾರೆ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆ ಅವರು ಇನ್ನು ಹಲವು ವರ್ಷಗಳ ಕಾಲ ಬದುಕಲಿ. 2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣವನ್ನು ನೋಡಲು ಅವರು ಬದುಕಲಿ ಎಂದು ಅಮಿತ್ ಶಾ ಹೇಳಿದ್ದಾರೆ.