ನವದೆಹಲಿ: ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ಜನ್‌ಮನ್ ಯೋಜನೆ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಮಾಹಿತಿ ನೀಡಿರುವ ಅವರು, ಈ ಯೋಜನೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಗಂಜಿಗೆರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪೂವನಹಳ್ಳಿ ಗ್ರಾಮವನ್ನು ಪಿಎಂ ಜನ್‌ಮನ್ ಯೋಜನೆಗೆ ಪರಿಗಣಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು, ಈ ಯೋಜನೆಯನ್ನು ಘೋಷಿಸಿ ಬುಡಕಟ್ಟು ಸಮುದಾಯದ ಜನರು ವಾಸವಿರುವ ಗ್ರಾಮಗಳನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಣೆ ಮಾಡಿದ್ದರು.
ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಪೌಷ್ಠಿಕಾಂಶ ಹೆಚ್ಚಿಸುವ ಜೊತೆಗೆ ರಸ್ತೆ, ದೂರ ಸಂಪರ್ಕ ಸುಸ್ಥಿರ ಜೀವನಾವಕಾಶಗಳನ್ನು ಕಲ್ಪಿಸುವ ಉದ್ದೇಶದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ.
ಆದಿವಾಸಿಗಳ ಗುಡಿ ಕೈಗಾರಿಕೆಗಳ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.