ನವದೆಹಲಿ: ಲಂಚ ಪ್ರಕರಣದಲ್ಲಿ ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕಾದಲ್ಲಿ ಬಂಧನ ವಾರೆಂಟ್ ಜಾರಿಯಾದ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಗೌತಮ್ ಅದಾನಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಉದ್ಯಮಿ ಗೌತಮ್ ಅದಾನಿ ಭಾರತೀಯ ಮತ್ತು ಅಮೇರಿಕನ್ ಕಾನೂನುಗಳನ್ನು ಉಲ್ಲಂಘನೆ ಮಾಡಿದ್ದಾರೆ. ಈ ಬಗ್ಗೆ ಅಮೇರಿಕಾ ಈಗ ಸ್ಪಷ್ಟಪಡಿಸಿದೆ ಎಂದರು.
ಈ ಹಿನ್ನೆಲೆಯಲ್ಲಿ ಕೂಡಲೇ ಅದಾನಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಇವರ ಜೊತೆಗೆ ಅವರ ರಕ್ಷಕ ಮತ್ತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರನ್ನು ಸಹ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಇನ್ನು ಸೋಮವಾರದಿಂದ ಪ್ರಾರಂಭವಾಗುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಲಾಗುವುದು ಎಂದರು.