ಮುಂಬೈ: ಮುಂಬೈನಲ್ಲಿ ಕಳೆದ ರಾತ್ರಿಯಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರೀ ಮಳೆಯಿಂದ ದೈನಂದಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಿಖ್ರೋಲಿಯಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದೆ.
ವಿಖ್ರೋಲಿಯಲ್ಲಿ ಭಾರೀ ಮಳೆಯಿಂದ ಮನೆ ಧ್ವಂಸವಾಗಿದ್ದು, ಕುಟುಂಬದ ನಾಲ್ವರು ಸದಸ್ಯರು ಮನೆಯಲ್ಲಿದ್ದಾಗಲೇ ಈ ದುರಂತ ಸಂಭವಿಸಿದೆ. ಸಮೀಪದಲ್ಲೇ ಇದ್ದ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಯಾನ್, ಕುರ್ಲಾ, ಚೆಂಬೂರ್ ಹಾಗೂ ಅಂಧೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಇನ್ನು ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಮುಂಬೈ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ರವಾನೆ ಮಾಡಿದ್ದು, ಜನರು ಅನಗತ್ಯವಾಗಿ ರಸ್ತೆಗಳಲ್ಲಿ ಪ್ರಯಾಣ ಮಾಡದಂತೆ ಸಲಹೆ ನೀಡುತ್ತಿದ್ದಾರೆ.





