Mysore
22
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಎಸ್‌ಐಆರ್‌ ಕಾನೂನುಬದ್ಧವಾಗಿದೆ : ಸುಪ್ರಿಂ ಮಹತ್ವದ ಆದೇಶ

ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ ಹಾಗೂ ಕಾನೂನು ಹೋರಾಟಕ್ಕೆ ಸವೋಚ್ಚ ನ್ಯಾಯಾಲಯ ಮಹತ್ವದ ತೆರೆ ಎಳೆದಿದೆ.

ಚುನಾವಣಾ ಆಯೋಗದ ಅಧಿಕಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ತಳ್ಳಿಹಾಕಿದ ನ್ಯಾಯಪೀಠ, ಎಸ್‌ಐಆರ್ ಕ್ರಮವು ಕಾನೂನುಬದ್ಧವಾಗಿದ್ದು, ಇದು ಸ್ವಚ್ಛ ಮತ್ತು ನ್ಯಾಯಸಮ್ಮತ ಚುನಾವಣೆಗೆ ಸಹಕಾರಿಯಾಗುತ್ತದೆ ಎಂದು ಮಹತ್ವದ ತೀರ್ಪು ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಮೂವರು ನ್ಯಾಯಮೂರ್ತಿಗಳ ಪೀಠ, ಚುನಾವಣಾ ಆಯೋಗಕ್ಕೆ ಈ ರೀತಿಯ ಎಸ್‌ಐಆರ್ ನಡೆಸುವ ಸಂಪೂರ್ಣ ಅಧಿಕಾರವಿದೆ ಎಂದು ಸ್ಪಷ್ಟಪಡಿಸಿದೆ.

ಚುನಾವಣಾ ಆಯೋಗ ತನ್ನ ಅಧಿಕಾರ ವ್ಯಾಪ್ತಿ ಮೀರಿಲ್ಲ. ಬಿಹಾರ ಮತದಾರರ ಪಟ್ಟಿಯ ಎಸ್‌ಐಆರ್ ಪ್ರಕ್ರಿಯೆ ಜನಪ್ರತಿನಿಧಿತ್ವ ಕಾಯ್ದೆ ಅಥವಾ ಸಂವಿಧಾನದ ಯಾವುದೇ ವಿಧಿಯನ್ನು ಉಲ್ಲಂಘಿಸಿಲ್ಲ ಎಂದು ಹೇಳಿದೆ. ತೀರ್ಪಿನಲ್ಲಿ, ‘ಮತದಾರರ ಪಟ್ಟಿಯ ಶುದ್ಧತೆ ಕಾಪಾಡುವುದು ಹಾಗೂ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಖಚಿತಪಡಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ. ಹೆಸರುಗಳನ್ನು ತೆಗೆದುಹಾಕುವ ಹಂತ ಹಂತದ ವಿಧಾನ, ಆಕ್ಷೇಪಣೆ ಸಲ್ಲಿಸಲು ಅವಕಾಶ ಹಾಗೂ ಇತರ ಭದ್ರತಾ ಕ್ರಮಗಳು ಈ ಪ್ರಕ್ರಿಯೆಯನ್ನು ನ್ಯಾಯಸಮ್ಮತ ಮತ್ತು ಏಕಪಕ್ಷೀಯವಲ್ಲದಂತಾಗಿಸುತ್ತವೆ ಎಂದು ಉಲ್ಲೇಖಿಸಿದೆ.

ಇದೇ ವೇಳೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಒಳಗೊಂಡಿರುವ ಸುರಕ್ಷತಾ ಕ್ರಮಗಳು ಮತದಾರರ ಪಟ್ಟಿಯ ಸಮಗ್ರತೆಯನ್ನು ಕಾಪಾಡಲು ಸಹಕಾರಿಯಾಗುತ್ತವೆ ಎಂದು ಸರ್ವೋಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಸಂವಿಧಾನಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯ ಕೈಗೆತ್ತಿಕೊಂಡಿತ್ತು.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ಚಿ ಮತ್ತು ವಿ.ಎಂ. ಪಂಚೋಲಿ ಅವರನ್ನೊಳಗೊಂಡ ಪೀಠ ಜನವರಿ ೨೯ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.
ಸಂವಿಧಾನದ ಕಲಂ ೩೨೬, ಜನಪ್ರತಿನಿಧಿತ್ವ ಕಾಯ್ದೆ ೧೯೫೦ ಹಾಗೂ ಮತದಾರರ ನೋಂದಣಿ ನಿಯಮಾವಳಿ ೧೯೬೦ರ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಇಂತಹ ಎಸ್‌ಐಆರ್ ನಡೆಸುವ ಅಧಿಕಾರವಿದೆಯೇ ಎಂಬ ಪ್ರಶ್ನೆಯನ್ನು ನ್ಯಾಯಾಲಯ ಪರಿಶೀಲಿಸಿತು.

Tags:
error: Content is protected !!