ನವದೆಹಲಿ: ನಿಜವಾದ ಭಾರತೀಯನಾದವನು ಈ ರೀತಿ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ವಿರುದ್ಧ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚೀನಾ 2000 ಕಿಲೋ ಮೀಟರ್‌ನಷ್ಟು ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ಈ ರೀತಿ ಹೇಳುತ್ತಿರಲಿಲ್ಲ. ಈ ವಿಚಾರವನ್ನು ಸಂಸತ್ ಅಧಿವೇಶನದಲ್ಲಿ ಯಾಕೆ ಪ್ರಶ್ನೆ ಮಾಡಲಿಲ್ಲ. ನಿಮ್ಮ ಹೇಳಿಕೆಗೆ ದಾಖಲೆ ಏನಾದರೂ ಇದೆಯಾ ಎಂದು ಪ್ರಶ್ನೆ ಮಾಡಿದೆ.
ಇನ್ನು ಭಾರತ್ ಜೋಡೋ ಯಾತ್ರೆಯ ವೇಳೆ ರಾಹುಲ್ ಗಾಂಧಿ ಅವರು, ಭಾರತದ ಗಡಿ ಪ್ರದೇಶವನ್ನು ಚೀನಾ ಆಕ್ರಮಿಸಿಕೊಂಡಿದೆ. ಜೊತೆಗೆ 20 ಭಾರತೀಯ ಸೈನಿಕರನ್ನು ಕೊಂದು, ಅರುಣಾಚಲ ಪ್ರದೇಶದಲ್ಲಿ ನಮ್ಮ ಸೈನಿಕರನ್ನು ಥಳಿಸಿರುವುದರ ಬಗ್ಗೆ ಮಾಧ್ಯಮಗಳು ಒಂದೇ ಒಂದು ಪ್ರಶ್ನೆಯನ್ನು ಕೇಳುವುದಿಲ್ಲ ಎಂದು ಹೇಳಿದ್ದರು.





