ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.
ಪಶ್ಚಿಮ ಬಂಗಾಳದ 152 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದ್ದು, ತಮಿಳುನಾಡಿನಲ್ಲಿ ಎಲ್ಲಾ 234 ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.
ಬೆಳಗ್ಗೆ 7:00 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6:00 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ. 5.73 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ತಮಿಳುನಾಡು ವಿಧಾನಸಭೆ ಚುನಾವಣೆಗೆ 4,023 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಐದು ವರ್ಷಗಳ ಕಾಲ ವಿರೋಧ ಪಕ್ಷದಲ್ಲಿದ್ದ ಎಐಎಡಿಎಂಕೆ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನ ನಡೆಸುತ್ತಿದ್ದರೆ, ಡಿಎಂಕೆ ಅಧಿಕಾರ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದೆ. ಈ ಮಧ್ಯೆ ನಟ ವಿಜಯ ಟಿವಿಕೆ ಪಕ್ಷದೊಟ್ಟಿಗೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಇನ್ನು ಪಶ್ಚಿಮ ಬಂಗಾಳದ ಮೊದಲ ಹಂತದ 152 ವಿಧಾನಸಭಾ ಕ್ಷೇತ್ರಗಳಲ್ಲಿ 1,478 ಅಭ್ಯರ್ಥಿಗಳು ಕಣದಲ್ಲಿದ್ದು, ಅನೇಕ ಘಟಾನುಘಟಿಗಳ ಅಖಾಡದಲ್ಲಿದ್ದಾರೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ತಮ್ಮ ಭದ್ರಕೋಟೆಯಾದ ನಂದಿಗ್ರಾಮ್ ಕ್ಷೇತ್ರದಿಂದ ಸ್ಪರ್ಧೆಯಲ್ಲಿದ್ದರೆ, ಭವಾನಿ ಪುರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಖಾಡದಲ್ಲಿದ್ದಾರೆ. ಮೇ 4 ರಂದು ಫಲಿತಾಂಶ ನಡೆಯಲಿದ್ದು, ಅಂದೇ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.





