ತಿರುಪತಿ: ತಿರುಪತಿಯಲ್ಲಿ ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜನರು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದ್ದು, ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ. ಟಿಕೆಟ್ ಪಡೆದುಕೊಳ್ಳುವ ಸಲುವಾಗಿ ಏಕಾಏಕಿ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.
ತಮಿಳುನಾಡಿನ ಸೇಲಂ ಮೂಲದ ಮಹಿಳೆ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.
ಇನ್ನು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಇಬ್ಬರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಸಿಎಂ ಚಂದ್ರಬಾಬು ನಾಯ್ಡು ಪ್ರತಿಕ್ರಿಯೆ ನೀಡಿದ್ದು, ಘಟನೆಯಿಂದ ದಿಗ್ಬ್ರಾಂತನಾಗಿದ್ದೇನೆ. ನಾಳೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.