ನವದೆಹಲಿ: ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ ಚುನಾವಣೆಯನ್ನು ನವೆಂಬರ್.22ರ ಮೊದಲು ಮತ್ತು ಪ್ರಸ್ತು ವಿಧಾನಸಭೆಯ ಅವಧಿ ಮುಗಿಯುವ ಮೊದಲು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದರು.
ಬಿಹಾರದಲ್ಲಿ ಸಿಎಂ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮತ್ತು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಮಧ್ಯೆ ನೇರ ಸ್ಪರ್ಧೆಯಿದೆ. ಎನ್‌ಡಿಎ ಪ್ರಸ್ತುತ 131 ಸ್ಥಾನಗಳನ್ನು ಹೊಂದಿದ್ದರೆ ವಿರೋಧ ಪಕ್ಷ 111 ಸ್ಥಾನಗಳನ್ನು ಹೊಂದಿದೆ.
ಇದನ್ನು ಓದಿ : ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ, ಕಲ್ಲೋಲ: ಬಿ.ವೈ.ವಿಜಯೇಂದ್ರ ಭವಿಷ್ಯ
ಬಿಜೆಪಿ 80, ಜೆಡಿಯು 45, ಎಚ್‌ಎಎಂ(ಎಸ್) 4 ಮತ್ತು ಇಬ್ಬರು ಸ್ವತಂತ್ರರು ಎನ್‌ಡಿಗೆ ಬಲ ನೀಡಿದರೆ ಆರ್‌ಜೆಡಿ 77, ಕಾಂಗ್ರೆಸ್ 19, ಸಿಪಿಐ(ಎಂ) 2, ಸಿಪಿಐ 2 ಸ್ಥಾನ ಹೊಂದಿದೆ.
ಕೊರೊನಾ ಸಾಂಕ್ರಾಮಿಕ ರೋಗದ ನಡುವೆ ಬಿಹಾರದಲ್ಲಿ 2020ರ ವಿಧಾನಸಭಾ ಚುನಾವಣೆಗಳು ಮೂರು ಹಂತಗಳಲ್ಲಿ ನಡೆದಿದ್ದವು. ಎನ್‌ಡಿಎ ಜಯಗಳಿಸಿದ ಬಳಿಕ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿದ್ದರು. ಹೀಗಿದ್ದರೂ 2022ರಲ್ಲಿ ನಿತೀಶ್ ಕುಮಾರ್ ಎನ್‌ಡಿಎ ತೊರೆದು ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಜೊತೆ ಸೇರಿ ಸರ್ಕಾರ ರಚಿಸಿದ್ದರು. ನಿತೀಶ್ ಕುಮಾರ್ 2024ರಲ್ಲಿ ಮಹಾಘಟಬಂಧನ್ ಜೊತೆಗಿನ ಸಂಬಂಧವನ್ನು ಮುರಿದು ಎನ್‌ಡಿಎ ಜೊತೆ ಮತ್ತೆ ಕೈಜೋಡಿಸಿ ಅಧಿಕಾರಕ್ಕೆ ಏರಿದ್ದರು.





