ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ.
ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಈ ದುರಂತ ಸಂಭವಿಸಿದೆ.
ದುರಂತ ನಡೆದ ಸ್ಥಳದಲ್ಲಿ ಚೆನ್ನೈ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ತಜ್ಞರ ತಂಡವು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಆದರೆ, ಭಾರೀ ಮಳೆಯಿಂದ ಅಡಚಣೆಯಾಗಿದ್ದು, ಎರಡನೇ ಭೂಕುಸಿತ ಸ್ಥಳೀಯ ದೇವಸ್ಥಾನದ ಬಳಿಯ ಸ್ಥಳದಲ್ಲಿ ಸಂಭವಿಸಿದೆ.
ಇನ್ನು ಘೋರ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಭಾರೀ ಗಾತ್ರದಲ್ಲಿ ಗುಡ್ಡ ಕುಸಿತ ಉಂಟಾಗಿರುವ ಕಾರಣ ಹಾಗೂ ಪದೇ ಪದೇ ಮಳೆ ಬರುತ್ತಿರುವ ಕಾರಣ ಕಾರ್ಯಾಚರಣೆಗೆ ಅಡ್ಡಿ ಉಂಟಾಗುತ್ತಿದೆ.
ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.